ಕರಾವಳಿ ಜಿಲ್ಲೆಗಳಲ್ಲಿ ಮುಂದುವರಿದ ಮಳೆ, ರೆಡ್ ಅಲರ್ಟ್ ಘೋಷಣೆ
- DoubleClickMedia
- Jul 4, 2023
- 1 min read

ಮಂಗಳೂರು ಜು.4: ನಿನ್ನೆಯಿಂದ ಕರಾವಳಿ ಜಿಲ್ಲೆಗಳಲ್ಲಿ ಎಡೆಬಿಡದೇ ಮಳೆ ಸುರಿಯುತ್ತಿದೆ. ಇದು ಮುಂದಿನ ನಾಲ್ಕು ದಿನಗಳ ಕಾಲ ಮುಂದುವರಿಯಬಹುದು ಎಂಬ ಮುನ್ಸೂಚನೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಭಾರಿ ಮಳೆಯಾಗುವ ಸೂಚನೆಗಳಿದ್ದು, ಜುಲೈ 4 ರಿಂದ ಜುಲೈ 8 ರವರೆಗೆ ಕರಾವಳಿಯಲ್ಲಿ ಗಂಟೆಗೆ 45-55 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಇಲಾಖೆ ತಿಳಿಸಿದೆ.
ಉಡುಪಿ ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಮಣಿಪಾಲದ ಮುಖ್ಯ ರಸ್ತೆಯ ಪಕ್ಕದಲ್ಲಿದ್ದ ಗುಡ್ಡವೊಂದು ಮಂಗಳವಾರ ಕುಸಿದು ಬಿದ್ದಿದೆ. ಸತತ ಮಳೆಯಿಂದಾಗಿ ಗುಡ್ಡ ಕುಸಿದಿದೆ. ಗುಡ್ಡದ ಮೇಲೆ ಕಟ್ಟಡಗಳಿದ್ದು, ಭಯದ ವಾತಾವರಣ ಸೃಷ್ಟಿಯಾಗಿದೆ.
ಇನ್ನು ಸೋಮವಾರ ಸುರಿದ ಭಾರೀ ಮಳೆಗೆ ಮಂಗಳೂರು ನಗರದ ಪಂಪ್‌ವೆಲ್ ವೃತ್ತ ಸಂಪೂರ್ಣ ಜಲಾವೃತಗೊಂಡಿದ್ದು, ತೀವ್ರ ಟ್ರಾಫಿಕ್ ಜಾಮ್ ಉಂಟಾಗಿತ್ತು. ಪಂಪ್‌ವೆಲ್ ಮೇಲ್ಸೇತುವೆ ಕೆಳಗೆ ಮೊಣಕಾಲು ಎತ್ತರಕ್ಕೆ ನೀರು ಹರಿದು ಮಂಗಳೂರು ಕಡೆಗೆ ಹೋಗುವ ರಸ್ತೆಯಲ್ಲಿ ಸಂಚಾರ ಸ್ಥಗಿತಗೊಂಡಿದ್ದವು. ಇನ್ನು ಕೊಟ್ಟಾರ ಚೌಕಿ ಜಂಕ್ಷನ್ ಕೂಡ ಭಾರೀ ಮಳೆಗೆ ಜಲಾವೃತವಾಗಿತ್ತು. ಕೊಟ್ಟಾರ ಚೌಕಿ ಸ್ವಿಮಿಂಗ್‌ಫುಲ್‌ನಂತಾಗಿ ವ್ಯಕ್ತಿಯೊಬ್ಬರು ಈಜಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕರ್ನಾಟಕದ ಯಾವ ಜಿಲ್ಲೆಗೆ ಯಾವ ಅಲರ್ಟ್?
ರೆಡ್ ಅಲರ್ಟ್: ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳು
ಆರೆಂಜ್ ಅಲರ್ಟ್: ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳು
ಯೆಲ್ಲೋ ಅಲರ್ಟ್: ಬೆಳಗಾವಿ, ಧಾರವಾಡ, ಗದಗ, ಹಾವೇರಿ, ರಾಯಚೂರು, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಮೈಸೂರು ಮತ್ತು ತುಮಕೂರು ಜಿಲ್ಲೆಗಳು
Comments