top of page

ಜುಲೈ 27 ರ ವರೆಗೆ ಭಾರೀ ಮಳೆ ಮುನ್ಸೂಚನೆ: ರಾಜ್ಯದ ವಿವಿಧೆಡೆ ಪ್ರವಾಹ ಭೀತಿ

  • Writer: DoubleClickMedia
    DoubleClickMedia
  • Jul 23, 2023
  • 1 min read

overflowing river

ರಾಜ್ಯದ ವಿವಿಧೆಡೆ ಧಾರಾಕಾರ ಮಳೆಯಾಗಿದ್ದು, ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಜುಲೈ 27ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೊಷಿಸಲಾಗಿದ್ದು, ಹಾಸನ, ಯಾದಗಿರಿ, ಕಲಬರಗಿ, ಧಾರವಾಡ, ಬೆಳಗಾವಿ, ಬೀದರ್​ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ.


ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸೂಚನೆಯಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ.

ಗಂಟೆಗೆ 55 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದೆ. ಪ್ರವಾಸಿಗರು ಮತ್ತು ಸ್ಥಳೀಯರಿಗೂ ಕೂಡ ಸಮುದ್ರ ತೀರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ


ಚಿಕ್ಕಮಗಳೂರಿನ ಕೆಲ ಭಾಗದಲ್ಲಿ ನದಿಗಳು ಪ್ರವಾಹದ ಮಟ್ಟ ಮೀರಿ ಹರಿಯುತ್ತಿವೆ. ಭದ್ರಾನದಿ ಉಕ್ಕಿ ಹರಿದು ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದೆ. ತುಂಗಾನದಿಯಲ್ಲೂ ನೀರಿನ ಪ್ರಮಾಣ ಏರಿದ್ದು, ಶೃಂಗೇರಿ ಆಸುಪಾಸಿನ ಕೆಲ ಗ್ರಾಮಗಳು ಜಲಾವೃತವಾಗಿವೆ.


ನಿರಂತರವಾಗಿ ಮಳೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ. ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದ್ದು ಸ್ನಾನಘಟ್ಟಕ್ಕೆ ತೆರಳದಂತೆ ಭಕ್ತರಿಗೆ ಸೂಚನೆ ನೀಡಲಾಗಿದೆ.


ಕಲಬುರಗಿಯ ದುಬೈ ಕಾಲೋನಿಯಲ್ಲಿ ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದು ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ. ಓವರ್‌ಹೆಡ್ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ತೆಗೆದಿದ್ದ ತಗ್ಗುಗುಂಡಿ ಮಳೆ ನೀರಿನಿಂದ ಸಂಪೂರ್ಣ ಭರ್ತಿಯಾಗಿತ್ತು. ಅಭಿ(11), ಅಜಯ್(12) ಎಂಬ ಇಬ್ಬರು ಬಾಲಕರು ಮೃತಪಟ್ಟಿದ್ದಾರೆ.





Komentarze


bottom of page